May 30, 2026
IMG_20260408_205750

ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು “ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು.

• ಕಾಗವಾಡ ತಾಲೂಕಿನ ೮ ಗ್ರಾಮ ಪಂಚಾಯಿತಿಗಳಲ್ಲಿ ಶೇ.೧೦೦ ಮನೆಕರ ವಸೂಲಾತಿ ಸಾಧನೆಯಾಗಿದ್ದು, ಈ ಸಾಧನೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿಶೇಷ ಪ್ರಯತ್ನ ಕಾರಣವಾಗಿದೆ. ಇದರ ಫಲವಾಗಿ ಕಾಗವಾಡ ತಾಲೂಕು ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು. ಆದರೆ ಕರ ಪಾವತಿಸಿದ ನಾಗರಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಈ ಸಾಧನೆ ಸಾರ್ಥಕವಾಗುತ್ತದೆ ಎಂದು ಸೂಚಿಸಿದರು.೨೦೨೫ನೇ ಸಾಲಿನಲ್ಲಿ ಉಗಾರ ಬುದ್ರುಕ್ ಗ್ರಾಮ ಪಂಚಾಯಿತಿ ಶೇ.೧೦೦ ಕರ ವಸೂಲಾತಿ ಸಾಧಿಸಿದ್ದು, ಈ ಅನುದಾನವನ್ನು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

• ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು, ಗ್ರಂಥಾಲಯ, ಅಂಗನವಾಡಿ ಹಾಗೂ ಕೂಸಿನ ಮನೆ ಕೇಂದ್ರಗಳ ಕಾರ್ಯನಿರ್ವಹಣೆ ಸಮರ್ಪಕವಾಗಿದ್ದು, ಇನ್ನಷ್ಟು ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

•  ಹಿಂದುಳಿದ ಗ್ರಾಮಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದು “ಕಾಯಕ ಗ್ರಾಮ” ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ಆಯ್ಕೆಗೊಂಡ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಕೈಗೊಳ್ಳಲಾಗುವುದು ಎಂದು ಹೇಳಿದರು.

•  ಉಗಾರ ಗ್ರಾಮದ ಶಾಸಕರ ಮಾದರಿ ಶಾಲೆಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆಗಳು ಒಂದೇ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಕರ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಎರಡು ಶಾಲೆಗಳನ್ನು ಏಕೀಕರಣಗೊಳಿಸಿ ಎಲ್ಲಾ ಮಕ್ಕಳಿಗೆ ಒಂದೇ ಸೂರಿನಡಿ ಕಲಿಕೆಯ ಅವಕಾಶ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

♦ ಶಾಲಾ ಮಕ್ಕಳೊಂದಿಗೆ ಸಂವಾದ:

•  ಶಾಸಕರ ಮಾದರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಸ್ಮಾರ್ಟ್ ತರಗತಿ, ೭ನೇ ತರಗತಿ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದರು. ಗಣಿತ ಲೆಕ್ಕ ಸರಿಯಾಗಿ ಬಿಡಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಅಭಿನಂದಿಸಿದರು.

• ಶಾಲಾ ಆವರಣದಲ್ಲಿರುವ ನರೇಗಾ ಯೋಜನೆಯ ಕೂಸಿನ ಮನೆ ಕೇಂದ್ರಕ್ಕೆ ಭೇಟಿ ನೀಡಿ, ಆರೈಕೆದಾರರಿಗೆ ಮಕ್ಕಳ ಆರೈಕೆಯಲ್ಲಿ ಹೆಚ್ಚಿನ ಗಮನ ಹರಿಸಲು ಸೂಚಿಸಿದರು.

• ಬಳಿಕ ಎನ್‌ಆರ್‌ಎಲ್‌ಎಂ ಸಂಜೀವಿನಿ ಒಕ್ಕೂಟದ ಕಚೇರಿಗೆ ಭೇಟಿ ನೀಡಿ ಮಹಿಳೆಯರು ತಯಾರಿಸಿದ ಆಹಾರ ಪದಾರ್ಥಗಳು ಹಾಗೂ ಕೈಗಾರಿಕಾ ವಸ್ತುಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

•  ೨೦೨೫–೨೬ನೇ ಸಾಲಿನಲ್ಲಿ ಶೇ.೧೦೦ ಕರ ವಸೂಲಾತಿ ಸಾಧನೆಗೈದ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

• ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

• ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ, ಅಥಣಿ ತಾಪಂ ಇಒ ಶಿವಾನಂದ ಕೊಲ್ಲಾಪುರ, ಸಹಾಯಕ ನಿರ್ದೇಶಕ ಎ.ಡಿ. ಅನ್ಸಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರAಗ ಮದಬಾವಿ, ತಾಲೂಕು ವೈದ್ಯಾಧಿಕಾರಿ ಡಾ. ಬಸವಗೌಡ ಕಾಗೆ, ಪಶುವೈದ್ಯಾಧಿಕಾರಿ ಎಂ.ಎನ್.ಕಾAಬಳೆ ಸೇರಿದಂತೆ ಹಲವು ಅಧಿಕಾರಿಗಳು, ಪಿಡಿಒ ಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555