ಇಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದೆ.

ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸನ್ನು ನನಸಾಗಿಸಲು ಗ್ರಾಮ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದೆ. ಜನರಿಂದ ಜನರಿಗಾಗಿ ನಡೆಯುವ ಆಡಳಿತ ಗ್ರಾಮ ಮಟ್ಟದಲ್ಲೇ ಆರಂಭವಾಗಿದ್ದು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಈ ಮೂರು ಹಂತಗಳ ವ್ಯವಸ್ಥೆ ಗ್ರಾಮಗಳ ಅಭಿವೃದ್ಧಿಗೆ ಬಲವಾದ ಅಡಿಪಾಯ.
ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಪಂಚಾಯತ್ ರಾಜ್ ಇಲಾಖೆ ಹಾಗೂ ಅಧಿಕಾರಿಗಳು ಮತ್ತಷ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗದ ಸಮನ್ವಯ ಅತ್ಯಂತ ಮುಖ್ಯವೆಂದು ತಿಳಿಸಿದೆ.
ಗ್ರಾಮಗಳ ಸಬಲೀಕರಣ, ಸ್ಥಳೀಯ ಆಡಳಿತದ ಬಲವರ್ಧನೆ ಮತ್ತು ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜನರ ಮನದಲ್ಲಿ ಶಾಶ್ವತವಾಗಿ ಉಳಿಯುವ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದೆ.
ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಶಾಸಕರುಗಳಾದ ಬಾಬಾಸಾಹೇಬ ಪಾಟೀಲ, ಗಣೇಶ ಹುಕ್ಕೇರಿ, ಆಸೀಪ್(ರಾಜು)ಸೇಠ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ, ಪೋಲಿಸ್ ಆಯುಕ್ತರಾದ ಬೋರಸೆ ಗುಲಾಬರಾವ್ ಭೂಷಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಯೋಜನಾಧಿಕಾರಿ ರವಿ ಬಂಗಾರಪ್ಪನವರ,ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡಿದ ಪ್ರಾರ್ಥನಾ ಬಿರಾದಾರ ಪಾಟೀಲ ಅವರನ್ನು ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
#NationalPanchayatiRajDay #GramaSwarajya #SatishJarkiholi #belagavi
